ಮತಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಪರಿಶೀಲಿಸಿಕೊಳ್ಳಿ: ಕರಡು ಮತದಾರರ ಪಟ್ಟಿ ಪ್ರಕಟ
ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರು ತಮ್ಮ ಹೆಸರು ಮತ್ತು ವಿವರಗಳನ್ನು ರಾಜ್ಯದ ಅಧಿಕೃತ ವೆಬ್‌ಸೈಟ್ ceo.karnataka.gov.in ನಲ್ಲಿ ಪರಿಶೀಲಿಸಿಕೊಳ್ಳಬಹುದು.
ರಾಜ್ಯದಲ್ಲಿ ಒಟ್ಟು 5.54 ಕೋಟಿ ಮತದಾರರು ಇದ್ದು, ಈ ಪೈಕಿ 4.46 ಕೋಟಿ ಮತದಾರರ ಹೆಸರುಗಳು ಪ್ರಸ್ತುತ ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿವೆ. SIR ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಸುಮಾರು 1.08 ಕೋಟಿ ಹೆಸರುಗಳು ಕರಡು ಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ ಎಂದು ತಿಳಿಸಲಾಗಿದೆ.
ಕರಡು ಪಟ್ಟಿಯಲ್ಲಿ ಸೇರ್ಪಡೆಯಾಗಿರುವ 4.46 ಕೋಟಿ ಮತದಾರರ ಪೈಕಿ ಸುಮಾರು 43.8 ಲಕ್ಷ ಮಂದಿಗೆ ಮುಂದಿನ ಹಂತದಲ್ಲಿ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ.
ಮತದಾರರು ತಮ್ಮ ಹೆಸರು ಕರಡು ಪಟ್ಟಿಯಲ್ಲಿ ಇದೆಯೇ, ತಮ್ಮ ವಿವರಗಳು ಸರಿಯಾಗಿವೆಯೇ ಎಂಬುದನ್ನು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು. ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 23ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಮತದಾರರು ಕೊನೆಯ ದಿನದವರೆಗೆ ಕಾಯದೆ ಕೂಡಲೇ ತಮ್ಮ ಹೆಸರು ಪರಿಶೀಲಿಸಿಕೊಂಡು, ಅಗತ್ಯವಿದ್ದರೆ ಆಕ್ಷೇಪಣೆ ಅಥವಾ ತಿದ್ದುಪಡಿ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.