ಬೆಂಗಳೂರು, ಜುಲೈ 22: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಿ ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ, 2026-27ನೇ ಶೈಕ್ಷಣಿಕ ಸಾಲಿಗೆ ಎರಡನೇ ಹಂತದಲ್ಲಿ 6,617 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು 33,708 ಪಿ.ಎಸ್.ಟಿ (PST) ಹಾಗೂ ಜಿ.ಪಿ.ಟಿ (GPT) ಹುದ್ದೆಗಳು ಖಾಲಿ ಇದ್ದು, ಮೊದಲ ಹಂತದಲ್ಲಿ 30,337 ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿತ್ತು. ಇದೀಗ ಉಪ ನಿರ್ದೇಶಕರ ಮನವಿಯ ಮೇರೆಗೆ ಹಾಗೂ ವಿದ್ಯಾರ್ಥಿ-ಶಿಕ್ಷಕರ ಅನುಪಾತ (PTR) ಆಧಾರದ ಮೇಲೆ ಲಭ್ಯವಿದ್ದ 9,663 ಹುದ್ದೆಗಳ ಪೈಕಿ 6,617 ಹುದ್ದೆಗಳಿಗೆ ಜಿಲ್ಲಾವಾರು ಹಂಚಿಕೆ ಮಾಡಿ ಎರಡನೇ ಹಂತದ ನೇಮಕಾತಿಗೆ ಅನುಮೋದನೆ ನೀಡಲಾಗಿದೆ.
ಈ ನೇಮಕಾತಿಯು ಖಾಯಂ ಶಿಕ್ಷಕರ ನೇಮಕಾತಿಯಾಗುವವರೆಗೆ ಅಥವಾ 2026-27ನೇ ಶೈಕ್ಷಣಿಕ ವರ್ಷದ ಅಂತ್ಯವಾದ ಮಾರ್ಚ್ 2027ರವರೆಗೆ ಮಾತ್ರ ತಾತ್ಕಾಲಿಕವಾಗಿ ಜಾರಿಯಲ್ಲಿರಲಿದೆ.
ಈ ಆದೇಶದೊಂದಿಗೆ 2026-27ನೇ ಸಾಲಿನಲ್ಲಿ ರಾಜ್ಯಾದ್ಯಂತ ಒಟ್ಟು 36,944 ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಿರುವಂತಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಲಾ ಮುಖ್ಯ ಶಿಕ್ಷಕರು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪಾರದರ್ಶಕ ಮತ್ತು ಶೀಘ್ರ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ. ಆದೇಶ ಪಾಲನೆಯಲ್ಲಿ ಯಾವುದೇ ನಿರ್ಲಕ್ಷ್ಯ ಅಥವಾ ವಿಳಂಬ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆಗಾರರಾಗಲಿದ್ದಾರೆ ಎಂದು ಇಲಾಖೆಯು ಎಚ್ಚರಿಕೆ ನೀಡಿದೆ.
📌 ಇದನ್ನೂ ಓದಿ (Also Read):