ಶಾಲೆಗಳಲ್ಲಿ ದಿನಪತ್ರಿಕೆ ಓದುವಿಕೆ ಕಡ್ಡಾಯಗೊಳಿಸಲು ಸೂಚನೆ
ಬೆಂಗಳೂರು, ಏಪ್ರಿಲ್ 26: ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಇಂಟರ್‌ನೆಟ್, ಮನರಂಜನೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆಯುತ್ತಿರುವ ಹಿನ್ನೆಲೆಯಲ್ಲಿ, ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ಜ್ಞಾಪಕ ಶಕ್ತಿ ಕುಂದು, ಶ್ರವಣದೋಷ ಮತ್ತು ದೈಹಿಕ ಚಟುವಟಿಕೆಗಳ ಮೇಲಿನ ಆಸಕ್ತಿ ಕಡಿಮೆಯಾಗುತ್ತಿರುವುದು ಗಮನಕ್ಕೆ ಬಂದಿದೆ.
ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಓದು ಅಭ್ಯಾಸವನ್ನು ಬೆಳೆಸುವ ಉದ್ದೇಶದಿಂದ, ಶಾಲೆಗಳಲ್ಲಿ ದಿನಪತ್ರಿಕೆ ಓದುವಿಕೆಯನ್ನು ಉತ್ತೇಜಿಸುವಂತೆ ಕ್ರಮ ಕೈಗೊಳ್ಳಲು ಮುಂದಾಗಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ಈ ಬಗ್ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಶಾಲಾ ಶಿಕ್ಷಣ ಇಲಾಖೆ), ಬೆಂಗಳೂರು ಅವರಿಗೆ ಮನವಿ ಸಲ್ಲಿಸಿದ್ದರು.
ಮನವಿಯನ್ನು ಪರಿಶೀಲಿಸಿದ ನಂತರ, ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದೆ. ಅದರಂತೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳು ಸೇರಿದಂತೆ ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುವ ವಸತಿ ಶಾಲೆಗಳು, ನಿಲಯಗಳು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಪ್ರತಿದಿನ ಬೆಳಗಿನ ಪ್ರಾರ್ಥನೆ ನಂತರ ಕನಿಷ್ಠ 10 ನಿಮಿಷಗಳ ಕಾಲ ಕನ್ನಡ ದಿನಪತ್ರಿಕೆ ಓದುವಿಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ಸೂಚಿಸಲಾಗಿದೆ.
ಈ ಕ್ರಮದಿಂದ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ವೃದ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ, ಶಬ್ದಕೋಶ ಹಾಗೂ ಭಾಷಾ ನೈಪುಣ್ಯ ಹೆಚ್ಚಳಕ್ಕೆ ಸಹಕಾರಿ ಆಗಲಿದೆ ಎಂದು ಶಿಕ್ಷಣ ವಲಯದವರು ಅಭಿಪ್ರಾಯಪಟ್ಟಿದ್ದಾರೆ.